ಬೆಂಗಳೂರು, ಅ.6: ಕರ್ನಾಟಕದ ನ್ಯಾಯಾಂಗ ವ್ಯವಸ್ಥೆಯ ಡಿಜಿಟಲೀಕರಣ ಮತ್ತು ಡಿಜಿಟಲ್ ರೂಪಾಂತರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂ.704 ಕೋಟಿ ವೆಚ್ಚದ ಯೋಜನೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದ (ಕೆಎಸ್‌ಡಿಸಿ) ಮೂಲಕ ನ್ಯಾಯಾಂಗಕ್ಕಾಗಿ ದತ್ತಾಂಶ ಕೇಂದ್ರ ಹಾಗೂ ವಿಪತ್ತು ಮರುಸ್ಥಾಪನಾ ಕೇಂದ್ರ ಸ್ಥಾಪಿಸುವುದು ಸೇರಿದಂತೆ ವಿವಿಧ ಡಿಜಿಟಲೀಕರಣ ಮತ್ತು ಡಿಜಿಟಲ್ ರೂಪಾಂತರ ಕಾಮಗಾರಿಗಳನ್ನು ಕೈಗೊಳ್ಳಲು ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ರಾಜ್ಯದ ನ್ಯಾಯಾಲಯಗಳ ಡಿಜಿಟಲ್ ಮೂಲಸೌಕರ್ಯ ಮತ್ತಷ್ಟು ಬಲಪಡಿಸುವುದರ ಜೊತೆಗೆ ನ್ಯಾಯಾಂಗ ಸೇವೆಗಳನ್ನು ಹೆಚ್ಚು ಸುಗಮ ಹಾಗೂ ಪರಿಣಾಮಕಾರಿಯಾಗಿ ಒದಗಿಸಲು ಸಹಕಾರಿಯಾಗಲಿದೆಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಯೋಜನೆಯ ಅನುಷ್ಠಾನಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗವನ್ನು ನೋಡಲ್ ಇಲಾಖೆಯಾಗಿ ನೇಮಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ