ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದರು.
ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹಧನವನ್ನು ಸರ್ಕಾರ ಬಿಡುಗಡೆ ಮಾಡದೆ, ಸಾವಿರಾರು ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದೆಡೆ, ಮಳೆ ವಿಳಂಬದಿಂದಾಗಿ ಬೆಳೆಗಳು ಕೈಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರದ ಸಂಕಷ್ಟದಿಂದ ರೈತರು ತತ್ತರಿಸಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದ ಜನರು ಎದುರಿಸುತ್ತಿರುವ ಈ ಜ್ವಲಂತ ಸಮಸ್ಯೆಗಳ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿ ಬಿಜೆಪಿ ಸಮರ್ಥವಾಗಿ ಧ್ವನಿ ಎತ್ತಲಿದೆ. ಜನರ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಯಬೇಕಾದರೆ ಅಧಿವೇಶನವು ಸುಸೂತ್ರವಾಗಿ ಮತ್ತು ಸಮರ್ಪಕವಾಗಿ ನಡೆಯಬೇಕು. ಸರ್ಕಾರವು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.